ಖ್ಯಾತ ಹಿರಿಯ ರಂಗಭೂಮಿ ಕಲಾವಿದ, ಹಾಸ್ಯನಟ ಮತ್ತು ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು. ಭಾನುವಾರ ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ಗಾಗಿ ಉಡುಪಿಗೆ ಬಂದಿದ್ದ ರಾಜು ತಾಳಿಕೋಟಿ ಅವರು, ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುವಾಗ ಭಾನುವಾರ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಈ ಮೊದಲು ಕೂಡ ಅವರಿಗೆ ಹೃದಯಾಘಾತವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಒತ್ತಡದಿಂದಾಗಿ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ವಿಜಯಪುರದಲ್ಲಿ ನೆರವೇರಿಸಲಾಗುವುದು ಎಂದು ಪುತ್ರ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ಅವರು ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಟನಾಗಿರುವುದರ ಜೊತೆಗೆ ಅವರು ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು. ಇವರು ಹಲವು ನಾಟಕಗಳಲ್ಲಿ ಅಭಿನಯಿಸಿದ್ದು, ಮುಖ್ಯವಾಗಿ ಕುಡುಕರ ಜೀವನವನ್ನು ಹಾಸ್ಯವಾಗಿ ಚಿತ್ರಿಸಿದ `ಕಲಿಯುಗದ ಕುಡುಕ’ ನಾಟಕದ ಮೂಲಕ ಬಹಳಷ್ಟು ಜನಪ್ರಿಯತೆಯನ್ನು ಗಳಿಸಿದ್ದರು.
ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ರಂಗಭೂಮಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

