ಕೂಡ್ಲಿಗಿ: ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಮರ್ಪಕ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಮಹಿಳೆಯರು ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದರೂ, ಆ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಕುಡಿಯುವ ನೀರಿನ ಕೊರತೆಯಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಜಾನುವಾರುಗಳಿಗೂ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಬಳಕೆಗೆ ಹಾಗೂ ದನಕರುಗಳಿಗೆ ನೀರು ತರಲು ಪಕ್ಕದ ಜಮೀನುಗಳನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಗ್ರಾಮಕ್ಕೆ ಕಳೆದ ಸುಮಾರು 20 ವರ್ಷಗಳಿಂದ ಕುಡಿಯುವ ನೀರು ಪೂರೈಸುತ್ತಿದ್ದ ಗ್ರಾಮ ಪಂಚಾಯಿತಿಗೆ ಸೇರಿದ ಕೊಳವೆಬಾವಿ ಇದೀಗ ವಿವಾದಕ್ಕೆ ಸಿಲುಕಿದೆ. ಕೊಳವೆಬಾವಿ ತಮ್ಮ ಜಮೀನಿನ ವ್ಯಾಪ್ತಿಗೆ ಬರುತ್ತದೆ ಎಂದು ಪಕ್ಕದ ಜಮೀನಿನ ಮಾಲೀಕರು ತಕರಾರು ಮಾಡುತ್ತಿರುವುದರಿಂದ ಗ್ರಾಮಸ್ಥರಿಗೆ ನೀರು ಪಡೆಯಲು ಸಾಧ್ಯವಾಗುತ್ತಿಲ್ಲ. ಖಾಸಗಿ ಜಮೀನಿನಲ್ಲಿರುವ ಕೊಳವೆಬಾವಿಯ ನೀರು ಕುಡಿಯಲು ಯೋಗ್ಯವಾಗಿದ್ದು, ಅದೇ ಕೊಳವೆಬಾವಿಯಿಂದ ಗ್ರಾಮಕ್ಕೆ ನೀರು ಪೂರೈಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಈ ಹಿಂದೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪಿಡಿಒ ಅವರಿಗೆ ಎರಡು ದಿನಗಳ ಗಡುವು ನೀಡಿದ ಗ್ರಾಮಸ್ಥರು, ಅಷ್ಟರೊಳಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನಾಕಾರರ ಮನವಿ ಆಲಿಸಿದ ಪಿಡಿಒ ಲಕ್ಷ್ಮೀಬಾಯಿ, ಕೊಳವೆಬಾವಿ ಮಾಲೀಕರು ನೀರು ಬಿಡಲು ಒಪ್ಪದ ಹಿನ್ನೆಲೆಯಲ್ಲಿ ಪಕ್ಕದಲ್ಲಿರುವ ಕೊಳವೆಬಾವಿಯನ್ನು ಮರುಕೊರೆಯಿಸುವ (ರಿಬೋರ್) ಮೂಲಕ ಎರಡು ದಿನಗಳೊಳಗೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

