ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಯುವಕನೊಬ್ಬನನ್ನು ರುಬ್ಬುಗುಂಡು ಕಲ್ಲಿನಿಂದ ತಲೆಯ ಹಿಂಭಾಗಕ್ಕೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್ನ ಎಲ್ಲಮ್ಮ ದೇವಸ್ಥಾನದ ಬಳಿ ತಡರಾತ್ರಿ ನಡೆದಿದೆ.
ಹತ್ಯೆಯಾದ ಯುವಕನನ್ನು ಕಿರಣ್ ಕುಮಾರ್ ಅಲಿಯಾಸ್ ಚುಮ್ಮಿ (25) ಎಂದು ಗುರುತಿಸಲಾಗಿದೆ. ಕರಿಯಪ್ಪ ಅಲಿಯಾಸ್ ಕರಿಯಾ (30) ಎಂಬಾತ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ.
ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ವೇಳೆ ಆರೋಪಿ ರುಬ್ಬುಗುಂಡು ಕಲ್ಲಿನಿಂದ ಕಿರಣ್ ಕುಮಾರ್ನ ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆಯಾದ ಯುವಕ ಹಾಗೂ ಕೊಲೆ ಆರೋಪಿತ ಇಬ್ಬರೂ ಈ ಹಿಂದೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಹಾಗೂ ಹೊಸಪೇಟೆ ಉಪವಿಭಾಗದ ಡಿವೈಎಸ್ಪಿ ಮುರಳೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಪಿಐಗಳಾದ ರಾಜೇಶ್ ಲಮಾಣಿ, ಹುಲುಗಪ್ಪ, ರಾಜೇಶ್ ಭಟಗುರ್ಕಿ ಹಾಗೂ ಸೋಮ್ಲಾನಾಯ್ಕ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

