ಕಾನಹೊಸಹಳ್ಳಿ; ಸಮೀಪದ ಮಾಲೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ಬುಧವಾರ 25ರಂದು ಹಮ್ಮಿಕೊಳ್ಳಲಾಗಿದೆ.
ಮಹೋತ್ಸವದ ಅಂಗವಾಗಿ ಮಂಗಳವಾರ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.
ನವೆಂಬರ್ 25ರಂದು ಬೆಳಿಗ್ಗೆ 9.30ಕ್ಕೆ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ.
ಬೆಳಿಗ್ಗೆ 11.30ರಿಂದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಯಿಂದ ಧರ್ಮಸಭೆ ಹಾಗೂ ಶ್ರೀ ಸ್ವಾಮಿಗಳ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಕಾನಮಡಗು ದಾಸೋಹ ಮಠದ ಐಮಡಿ ಶರಣರ್ಯಾರು ಸಾನಿಧ್ಯವಹಿಸಲಿದ್ದಾರೆ, ಕ್ಷೇತ್ರದ ಶಾಸಕ ಶ್ರೀನಿವಾಸ್ ಎನ್ ಟಿ, ಸಂಸದ ತುಕಾರಾಂ ಅಧ್ಯಕ್ಷತೆ ವಹಿಸಲಿದ್ದಾರೆ.
ಧಾರ್ಮಿಕ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು, ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಬಸವೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಮಾಲೂರು ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಧಾರ್ಮಿಕ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

